ಕೃಷ್ಣ ಜನ್ಮಾಷ್ಟಮಿ :-
ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ.
ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ.ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಾಗಿ ಶ್ರಾವಣ ಕೃಷ್ಣ ಅಷ್ಟಮಿಯಂದೂ,ಸೌರಮಾನ ರೀತಿಯಾಗಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನವೂ ಆಚರಿಸುತ್ತಾರೆ.
ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯಲಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.
ಕೃಷ್ಣಾಷ್ಟಮಿಯ ದಿನದಂದು ಮನೆ ಮತ್ತು ದೇವಾಯಲಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ,ಬಗೆಬಗೆಯ ತಿಂಡಿಗಳನ್ನು ಮಾಡಿ ಬಾಲಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.